ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಅವರ ದೇವನಹಳ್ಳಿ ರೋಡ್ ಶೋ ಮಳೆ ಕಾರಣ ರದ್ದಾದ ಹಿನ್ನೆಲೆಯಲ್ಲಿ ತಡ ರಾತ್ರಿ ಬಿಜೆಪಿ ರಾಜ್ಯ ನಾಯಕರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.
ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ನಂತರ ಕೆಲವು ಪ್ರಮುಖ ಲಿಂಗಾಯತ ನಾಯಕರು ಪಕ್ಷವನ್ನು ತೊರೆದ ಹಿನ್ನೆಲೆಯಲ್ಲಿ ಶಾ ಈ ಸಭೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಹಲವು ಪ್ರಮುಖ ನಾಯಕರು ಪಕ್ಷ ತೊರೆದ ಹಿನ್ನೆಲೆಯಲ್ಲಿ ಅಮಿತ್ ಶಾ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ತಡರಾತ್ರಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತು ಪಕ್ಷದ ಮುಖಂಡರಾದ ಅಣ್ಣಾಮಲೈ, ಶೋಭಾ ಕರಂದ್ಲಾಜೆ, ಬಿಎಲ್ ಸಂತೋಷ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಲಿಂಗಾಯತ ಮತಗಳನ್ನು ಕಳೆದುಕೊಳ್ಳಬಹುದು ಎಂದು ಹೇಳಲಾಗಿದೆ, ಬಿಜೆಪಿಯೊಳಗಿನ ಇತ್ತೀಚಿನ ಬೆಳವಣಿಗೆಗಳ ಲಾಭವನ್ನು ಕಾಂಗ್ರೆಸ್ ಪಕ್ಷವು ಪಡೆದುಕೊಂಡಿದ್ದು, ಬಿಜೆಪಿ ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೊರಟಿದೆ.
ಕೆಲವು ಪ್ರಮುಖ ನಾಯಕರ ಇತ್ತೀಚಿನ ನಿರ್ಗಮನದಿಂದಾಗಿ ಪಕ್ಷಕ್ಕೆ ಉಂಟಾಗಿರುವ ಡ್ಯಾಮೇಜ್ ಸರಿಪಡಿಸುವ ಕ್ರಮಗಳ ಬಗ್ಗೆ ಚರ್ಚಿಸಲು ಶಾ ಒಂದು ದಿನ ಕಳೆಯಲು ಬೆಂಗಳೂರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
