SS Mallikarjun; ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ 5 ಗ್ಯಾರಂಟಿ ಪ್ರಾರಂಭ; ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ದಾವಣಗೆರೆ; ಆ.30: ಸಾಮಾಜಿಕ ನ್ಯಾಯದ ಪರಿಕಲ್ಪನೆ ಮತ್ತು ಇದನ್ನು ಎತ್ತಿ ಹಿಡಿಯುವುದಕ್ಕೆ ಚುನಾವಣೆ ಸಂದರ್ಭದಲ್ಲಿ 5 ಗ್ಯಾರಂಟಿ ಕೊಟ್ಟು, ಪ್ರಾರಂಭಿಸಲಾಗಿದೆ. ಜನರಿಗೆ ಹಸಿವು ಮುಕ್ತತೆ, ವಾಸಿಸಲು ಸೂರು, ಆರೋಗ್ಯ ಸಂರಕ್ಷಣೆ ಮತ್ತು ಎಲ್ಲರಿಗೂ ಶಿಕ್ಷಣ ನೀಡುವುದು ನಮ್ಮ ಆದ್ಯತೆಯಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ (SS Mallikarjun) ತಿಳಿಸಿದರು.
ಅವರು ಬುಧವಾರ ದಾವಣಗೆರೆ ಹದಡಿ ರಸ್ತೆಯಲ್ಲಿನ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ಮನೆಯೊಡತಿಗೆ ಪ್ರತಿ ತಿಂಗಳು ಎರಡು ಸಾವಿರ ರೂ.ಗಳನ್ನು ನೀಡುವ ಗೃಹಲಕ್ಷ್ಮಿ (Gruha Lakshmi Scheme) ಯೋಜನೆ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಮುಖವಾಗಿ ಚುನಾವಣೆ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಅವುಗಳಲ್ಲಿ ಗೃಹಲಕ್ಷ್ಮಿ ಸೇರಿದಂತೆ ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 3,27,472 ಮಹಿಳೆಯವರು ನೊಂದಣಿ ಮಾಡಿಸಿದ್ದಾರೆ. ಇವರಿಗೆ ಇನ್ನು ಮುಂದೆ ಪ್ರತಿ ತಿಂಗಳು ಎರಡು ಸಾವಿರ ಅವರ ಖಾತೆಗೆ ನೇರವಾಗಿ ಜಮೆಯಾಗಲಿದೆ. ಇದಕ್ಕಾಗಿ ಜಿಲ್ಲೆಗೆ 64,80,92,000 ರೂ.ಗಳ ಅನುದಾನವನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಇನ್ನೂ ಶೇ 15 ರಷ್ಟು ಮಹಿಳೆಯರು ಯೋಜನೆಯಿಂದ ಹೊರಗಿದ್ದು ಮುಂದಿನ ದಿನಗಳಲ್ಲಿ ಇವರಿಗೂ ಯೋಜನೆಯ ಲಾಭ ಸಿಗಲಿದೆ ಎಂದರು.
ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಕುಟುಂಬದ ನಿರ್ವಹಣೆಗೆ ಅನುಕೂಲವಾಗಲು ಮನೆಯ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ತಿಂಗಳು ರೂ 2000 ಗಳನ್ನು ನೀಡಲಾಗುತ್ತಿದ್ದು ಯುವನಿಧಿಗೆ ಡಿಸೆಂಬರ್ ನಲ್ಲಿ ಚಾಲನೆ ಸಿಗಲಿದೆ. ಗ್ಯಾರಂಟಿ ಯೋಜನೆಯಡಿ ನೀಡಲಾಗುತ್ತಿರುವ ಹಣ ಕುಟುಂಬ ನಿರ್ವಹಣೆಗೆ ಅಗತ್ಯವಿದ್ದು ಈ ಹಣವನ್ನು ಬ್ಯಾಂಕುಗಳು ಅವರ ಯಾವುದೇ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಜಿಲ್ಲಾಧಿಕಾರಿಗಳು ಕ್ರಮವಹಿಸಬೇಕು ಎಂದರು.
Raksha Bandhan; ಬೆಣ್ಣೆ ನಗರಿಯಲ್ಲಿ ರಂಗೇರಿದ ರಕ್ಷಾ ಬಂಧನ!
ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಮಾತನಾಡಿ ರಾಜ್ಯದಲ್ಲಿ ಇಂದು ಸುರ್ವರ್ಣಾಕ್ಷರದಲ್ಲಿ ಬರೆದಿಡುವ ದಿನ ಇದಾಗಿದ್ದು, ಎಲ್ಲರಿಗೂ ಸಮಪಾಲು, ಸಮಬಾಳು ಎಂಬ ಧ್ಯೇಯೋದ್ದೇಶದಿಂದ ಮಹಿಳೆಯರ ಸಬಲೀಕರಣ ಹಾಗೂ ಅವರಿಗೆ ಶಕ್ತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಈ ಯೋಜನೆಯ ಅನುಕೂಲ ಸರಿಯಾದ ರೀತಿಯಲ್ಲಿ ಸದ್ಭಳಕೆ ಮಾಡಿಕೊಂಡು ಸ್ವಾಭಿಮಾನಿಗಳಾಗಬೇಕೆಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್.ಬಿ ಇಟ್ನಾಳ್ ಮಾತನಾಡಿ ಶೇ 90 ರಷ್ಟು ಮಹಿಳೆಯರು ಗ್ರಾಮಾಂತರ ಪ್ರದೇಶದವರಾಗಿದ್ದು ಅವರ ಸಾರ್ವತ್ರಿಕ ಕನಿಷ್ಠ ಆದಾಯ ಕಲ್ಪಿಸುವ ಯೋಜನೆ ಇದಾಗಿದೆ ಎಂದರು.
ಮಹಾನಗರಪಾಲಿಕೆ ಮೇಯರ್ ವಿನಾಯಕ ಬಿ.ಹೆಚ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಚಮನ್ ಸಾಬ್, ಗಡಿಗುಡಾಳ್ ಮಂಜುನಾಥ್, ಪಾಲಿಕೆ ಸದಸ್ಯರಾದ ಜಯಮ್ಮ ಗೋಪಿನಾಥ್, ಎ.ನಾಗರಾಜ್, ಉಪವಿಭಾಗಾಧಿಕಾರಿ ದುರ್ಗಾಶ್ರೀ ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಾಲಿಕೆ ಆಯುಕ್ತರಾದ ರೇಣುಕಾ ಸ್ವಾಗತಿಸಿದರು.
ಬೆಳವನೂರು ಗ್ರಾಮ ಪಂಚಾಯತಿಯಲ್ಲಿ ಗೃಹಲಕ್ಷ್ಮಿ ಚಾಲನೆ
ಬಸವೇಶ್ವರ ಸಮುದಾಯ ಭವನದಲ್ಲಿ ಜನಸಾಗರ ಹರಿದು ಬಂದಿತ್ತು. ಮಹಿಳೆಯರ ಸಂಖ್ಯೆನೇ ಹೆಚ್ಚಾಗಿತ್ತು. ಇದು ತುಂಬಾ ಖುಷಿಯದಂತ ವಿಚಾರ ಎಲ್ಲ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡಿತ್ತು. ನಮ್ಮ ಬೆಳವನೂರಿನ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು ತುಂಬಾ ಚೆನ್ನಾಗಿ ನಡೆಸಿಕೊಟ್ಟರು ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.