ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಕೆ. ಬಿ. ಕೊಟ್ರೇಶ್ ನೇಮಕ
ದಾವಣಗೆರೆ: ಭಾರತೀಯ ಜನತಾ ಪಕ್ಷದ ಕೈಗಾರಿಕಾ ಪ್ರಕೋಷ್ಠದ ರಾಜ್ಯ ಸಂಚಾಲಕರನ್ನಾಗಿ ಎ. ಕೆ. ಫೌಂಡೇಶನ್ ಅಧ್ಯಕ್ಷರೂ ಆದ ಬಿಜೆಪಿ ಮುಖಂಡ ಕೆ. ಬಿ. ಕೊಟ್ರೇಶ್ ಅವರನ್ನು ನೇಮಕ ಮಾಡಲಾಗಿದೆ.ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಪರಿಶ್ರಮಿಸುವರೆಂದು ಆಶಿಸುತ್ತೇನೆ ಎಂದು ವಿಜಯೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಎ. ಕೆ. ಫೌಂಡೇಶನ್ ಮೂಲಕ ಸಮಾಜಸೇವೆ, ಆರ್ ಎಸ್ ಎಸ್ ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೆ. ಬಿ. ಕೊಟ್ರೇಶ್ ಅವರು ಬಿಜೆಪಿ ನಾಯಕರೂ ಹೌದು. ಕೊಟ್ರೇಶ್ ಅವರ ಸೇವೆ ಪರಿಗಣಿಸಿ ಬಿ. ವೈ. ವಿಜಯೇಂದ್ರ ಅವರು ಈ ಹುದ್ದೆ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆ. ಬಿ. ಕೊಟ್ರೇಶ್ ಅವರು ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ರಾಜ್ಯ ಸಂಚಾಲಕರನ್ನಾಗಿ ನೇಮಕ ಮಾಡಿದ್ದು ತುಂಬಾನೇ ಖುಷಿ ಕೊಟ್ಟಿದೆ. ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಈ ಹುದ್ದೆ ನೀಡಿದ ಬಿ. ವೈ. ವಿಜಯೇಂದ್ರ, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರು, ಜಿಲ್ಲೆಯ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ. ನನ್ನ ಮೇಲೆ ಇಟ್ಟಿರುವ ನಂಬಿಕೆ ಹುಸಿಯಾಗದಂತೆ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದ್ದಾರೆ.