Teacher’s Day: ಜಿಲ್ಲೆಯ ಓರ್ವ ಶಿಕ್ಷಕ ಹಾಗೂ ಓರ್ವ ಶಿಕ್ಷಕಿಗೆ ತಲಾ ಹತ್ತು ಸಾವಿರ ರೂಪಾಯಿ: ಸಚಿವ ಬೈರತಿ ಬಸವರಾಜ್ ಘೋಷಣೆ
ದಾವಣಗೆರೆ: ಜಿಲ್ಲೆಯ ಅತ್ಯುತ್ತಮ ಶಿಕ್ಷಕರಿಗೆ ವೈಯಕ್ತಿಕವಾಗಿ ತಲಾ ಹತ್ತು ಸಾವಿರ ರೂಪಾಯಿ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಘೋಷಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಪ್ರತಿ ತಾಲೂಕಿನ ಓರ್ವ ಶಿಕ್ಷಕ ಹಾಗೂ ಓರ್ವ ಶಿಕ್ಷಕಿಗೆ ತಲಾ ಹತ್ತು ಸಾವಿರ ರೂಪಾಯಿ ನೀಡಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದು, ನವೆಂಬರ್ ಒಂದರೊಳಗಾಗಿ ಇಂತಹ ಶಿಕ್ಷಕರನ್ನು ಗುರುತಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.
ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬರುವ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಈಗಾಗಲೇ ಪ್ರಕಟಿಸಿದ್ದು, ಅದಕ್ಕೆ ನಾವು ಬದ್ಧರಿದ್ದೇವೆ ಎಂದರು.
ನಾಯಕತ್ವದ ವಿಚಾರದ ಬಗ್ಗೆ ಗೊಂದಲ ಇಲ್ಲ. ಅಮಿತ್ ಶಾ ಅವರು ಹೇಳಿದಕ್ಕೆ ನಾವು ಬದ್ದ. ಯಡಿಯೂರಪ್ಪ ಅವರ ರಾಜ್ಯ ಪ್ರವಾಸದ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವುದರಲ್ಲಿ ತಪ್ಪೇನಿಲ್ಲ. ಏಕೆಂದರೆ ಅವರು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ ಧೀಮಂತ ನಾಯಕ ಎಂದು ಹೇಳಿದರು.
ಯಡಿಯೂರಪ್ಪ ಅವರು ಯಾವುದೇ ಮೂಲಭೂತ ಸೌಲಭ್ಯಗಳು ಇಲ್ಲದ ಕಾಲದಲ್ಲಿ ರಾಜ್ಯ ಸುತ್ತಿ ಪಕ್ಷಕಟ್ಟಿದ್ದಾರೆ. ಅಮಿತ್ ಶಾ ಅವರು ಯಡಿಯೂರಪ್ಪ ಅವರ ಬಗ್ಗೆ ಅಪಾರ ಗೌರವ ಇಟ್ಟುಕೊಂಡು ಮಾತಾಡಿದ್ದಾರೆ ಎಂದರು.
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬೆಳಿಗ್ಗೆಯಿಂದ ಸಂಜೆವರೆಗೆ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆ ಕಾರಣಗಳಿಂದ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದು ತಿಳಿಸಿದರು.