ರಾಜ್ಯ ಬಜೆಟ್‌ನಲ್ಲಿ ವಿಶ್ವ ಕನ್ನಡ ಸಮ್ಮೇಳನದ ಘೋಷಣೆ ಜಿಲ್ಲಾ ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ಶ್ಲಾಘನೆ

ಬಿ. ವಾಮದೇವಪ್ಪ ಶ್ಲಾಘನೆ

ದಾವಣಗೆರೆ: ಕನ್ನಡ ನಾಡು ನುಡಿಯ ಹಿರಿಮೆ ಗರಿಮೆಯನ್ನು ಹೊರ ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಸರ್ವ ಕನ್ನಡಿಗರನ್ನು ಒಳಗೊಂಡು 3 ನೇ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ಆಯೋಜಿಸಲಾಗುವುದು ಎಂದು 2023-24 ರ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ದಾವಣಗೆರೆಯಲ್ಲಿಯೇ ವಿಶ್ವ ಕನ್ನಡ ಸಮ್ಮೇಳನ ನಡೆಯಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಭಗೀರಥ ಪ್ರಯತ್ನಕ್ಕೆ ಮಾನ್ಯ ಮುಖ್ಯಮಂತ್ರಿಗಳು ಮಾನ್ಯತೆ ನೀಡಿ ಬಜೆಟ್‌ನಲ್ಲಿ ಈ ಕುರಿತು ಘೋಷಣೆ ಮಾಡಿರುವುದಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಅತೀವ ಸಂತಸ ವ್ಯಕ್ತಪಡಿಸಿ ಬಸವರಾಜ ಬೊಮ್ಮಾಯಿಯವರು “ನುಡಿದಂತೆ ನಡೆದ ಮುಖ್ಯಮಂತ್ರಿಗಳು ” ಎಂದು ಬಣ್ಣಿಸಿದ್ದಾರೆ.

ಈಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜಗತ್ತಿನ ಮೂಲೆ ಮೂಲೆಗಳಲ್ಲಿ ‌ನಲೆಸಿರುವ ಕನ್ನಡಿಗರನ್ನು ಒಟ್ಟುಗೂಡಿಸಿ, ಕನ್ನಡ ನಾಡು-ನುಡಿಗೆ ಸಂಬಂಧಿಸಿದಂತೆ ಚರ್ಚಿಸಲು ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆಸುವುದಾಗಿ ಘೋಷಣೆ ಮಾಡಿದ್ದನ್ನು ಸ್ಮರಿಸಬಹುದು.
ಬಿ.ವಾಮದೇವಪ್ಪ ಅವರು 2021 ನವೆಂಬರ್‌ನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಚುನಾಯಿತರಾದ ಬಳಿಕ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿಯೇ ನಡೆಸಬೇಕೆಂದು‌ ಪಣತೊಟ್ಟು ಶಾಸಕರು, ಸಚಿವರು, ಮುಖ್ಯಮಂತ್ರಿಗಳಾದಿಯಾಗಿ ಎಲ್ಲರ ಬಳಿಯೂ ತೀವ್ರವಾದ ಒತ್ತಡ ಹೇರಿದ್ದರು. ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿಯೂ ತಾವು ಗೆದ್ದರೆ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ನಡೆಸಲು ಪ್ರಯತ್ನಿಸುವುದಾಗಿ ಘೋಷಿಸಿಕೊಂಡಿದ್ದರು. ಕಳೆದ ವರ್ಷ ಎಲೆಬೇತೂರಿನಲ್ಲಿ‌ ನಡೆದ 11ನೇ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೂ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ಆಯೋಜಿಸಬೇಕು ಎನ್ನುವ ನಿರ್ಣಯವನ್ನು ಕೈಗೊಂಡು ಸರಕಾರಕ್ಕೆ ಮನವಿ ಮಾಡಲಾಗಿತ್ತು. ಇತ್ತೀಚೆಗೆ ಈ ಬಾರಿಯ ಬಜೆಟ್‌ನಲ್ಲಿ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ಆಯೋಜಿಸುವ ಬಗ್ಗೆ ಪ್ರಸ್ತಾಪಿಸಬೇಕು ಹಾಗೂ ಅನುದಾನವನ್ನು ಮೀಸಲಿರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಪತ್ರವನ್ನೂ ಬರೆದು ಆಗ್ರಹಿಸಿದ್ದರು. ಕಳೆದ ತಿಂಗಳು ಜನವರಿಯಲ್ಲಿ ಹಾವೇರಿಯಲ್ಲಿ ನಡೆದ ೮೬ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೂ ದಾವಣಗೆರೆಯಲ್ಲಿಯೇ ವಿಶ್ವ ಕನ್ನಡ ಸಮ್ಮೇಳನ ನಡೆಯಬೇಕೆಂದು‌ ನಿರ್ಣಯ ಮಂಡಿಸಿ ಸರಕಾರಕ್ಕೆ ಒತ್ತಡ ಹೇರಿದ್ದರು. ಈ ಎಲ್ಲ ಪ್ರಯತ್ನಗಳ ನಡುವೆ ಇಂದಿನ ಬಜೆಟ್‌ನಲ್ಲಿ ದಾವಣಗೆರೆಯಲ್ಲಿ ವಿಶ್ವಕನ್ನಡ ಸಮ್ಮೇಳನ ನಡೆಸುವುದಾಗಿ ಮುಖ್ಯ ಮಂತ್ರಿಗಳು ಘೋಷಿಸಿದ್ದಾರೆ. ಇದು ದಾವಣಗೆರೆ ಜಿಲ್ಲೆಯ ಎಲ್ಲ ಕನ್ನಡಿಗರಿಗೆ, ಸಾಹಿತಿಗಳಿಗೆ, ವಿದ್ವಾಂಸರಿಗೆ, ಕಲಾವಿದರಿಗೆ, ಕನ್ನಡಪರ ಹೋರಾಟಗಾರರಿಗೆ, ಕನ್ನಡಪರ ಸಂಘ ಸಂಸ್ಥೆಗಳಿಗೆ ಹಾಗೂ ವಿಶೇಷವಾಗಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಸಂದ ಗೌರವವಾಗಿದೆ.

Leave a Reply

Your email address will not be published. Required fields are marked *

error: Content is protected !!