ಹೊನ್ನಾಳಿ ನ್ಯಾಮತಿ ಮಾದರಿ ಕ್ಷೇತ್ರಗಳಾಗಿಸುವ ಗುರಿ ಇದೆ! ಎಂಪಿ ರೇಣುಕಾಚಾರ್ಯ

ದಾವಣಗೆರೆ: ಜನಸಾಮಾನ್ಯರು ಈ ಹಿಂದೆ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರನ್ನು ಭೇಟಿಯಾಗಲು ಅಲೆದಾಡಬೇಕಿತ್ತು, ಜೊತೆಗೆ ಮಧ್ಯವರ್ತಿಗಳ ಹಾವಳಿ ಕೂಡ ಹೆಚ್ಚಾಗಿತ್ತು, ಈ ರೀತಿ ಅಲೆದಾಟಗಳನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದರು.

ಶುಕ್ರವಾರ ಕಂದಾಯ ಇಲಾಖೆ, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ಹೊನ್ನಾಳಿ ತಾಲ್ಲೂಕಿನ ಹಿರೇಗೋಣಿಗೆರೆ ಮತ್ತು ಬೇಲಿಮಲ್ಲೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿವಿಧ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಸರ್ಕಾರ ಇಂತಹ ಮಹತ್ವಾಕಾಂಕ್ಷೆ ಯೋಜನೆಯನ್ನು ರೂಪಿಸಿದೆ ಎಂದರು.

ಇತ್ತೀಚಿಗೆ ಅಕಾಲಿಕವಾಗಿ ಸುರಿದ ಬಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ವರದಿ ತಯಾರಿಸಲಾಗಿದೆ, ಮಳೆಯಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಲಾಗುವುದು. ಆಡಳಿತವನ್ನು ಸರಳೀಕರಣ ಗೊಳಿಸಿ ಹೊನ್ನಾಳಿ ನ್ಯಾಮತಿ ಅವಳಿ ತಾಲ್ಲೂಕುಗಳನ್ನು ರಾಜ್ಯದಲ್ಲಿ ಮಾದರಿ ಕ್ಷೇತ್ರಗಳಾಗಿ ಮಾಡುವ ಉದ್ದೇಶ ಹೊಂದಲಾಗಿದೆ. ಎರಡು ತಾಲ್ಲೂಕಿನ ಎಲ್ಲ ಹಳ್ಳಿಗಳಿಗೂ ಕುಡಿಯುವ ನೀರು ಒದಗಿಸುವ ಯೋಜನೆ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಹಿರೇಗೋಣಿಗೆರೆ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕುಂಭಮೇಳದೊ0ದಿಗೆ ಮೆರವಣಿಗೆ ನಡೆಸಲಾಯಿತು. ಶಾಸಕ ಎಂ.ಪಿ ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಜಿ.ಪಂ ಸಿಇಓ ಡಾ.ಎ. ಚನ್ನಪ್ಪ, ಹೊನ್ನಾಳಿ ತಹಶೀಲ್ದಾರ್ ರಶ್ಮಿ ಸೇರಿದಂತೆ ಇತರ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡವು ಗ್ರಾಮದ ವಿವಿಧ ಕಾಲೋನಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು.

ವಿಶೇಷವಾಗಿ ಕಾರ್ಯಕ್ರಮದಲ್ಲಿ  ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಹಾಗೂ ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ಪ್ರಮಾಣಪತ್ರಗಳು ಮತ್ತು ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಡಾ.ಎ.ಚನ್ನಪ್ಪ, ಹಿರೇಗೋಣಿಗೆರೆ ಗ್ರಾ ಪಂ ಅಧ್ಯಕ್ಷೆ ಅನಿತಾ. ಟಿ, ಬೇಲಿಮಲ್ಲೂರು ಗ್ರಾ ಪಂ ಅಧ್ಯಕ್ಷೆ ಸವಿತಾ, ಭೂಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್, ಡಿಎಚ್‌ಒ ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರೇಷ್ಮಾ ಕೌಸರ್, ಹೊನ್ನಾಳಿ ತಹಶೀಲ್ದಾರ ರಶ್ಮಿ, ಶ್ರೀನಿವಾಸ್ ಚಿಂತಾಲ್ ಸೇರಿದಂತೆ ವಿವಿಧ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!