ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಯೋಗದೊಂದಿಗೆ ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಕರ್ನಾಟಕ ಸರ್ಕಾರ ಚಿಂತನೆ ನಡೆಸುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಿಯುಸಿ ಹಂತದಿಂತ ತರಬೇತಿ ನೀಡುವುದು ಸೂಕ್ತ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಪ್ರದರ್ಶನ ವೀಕ್ಷಿಸಿದ ನಂತರ ಬೊಮ್ಮಾಯಿ ಅವರು ಮಾತನಾಡಿ, ಎಲ್ಲಾ ಶಿಕ್ಷಣ ಸಂಸ್ಥೆಗಳು ಅಲ್ಪಾವಧಿ ಕೋರ್ಸುಗಳನ್ನು ಕಲಿಸುವ ಅವಶ್ಯಕತೆ ಇದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳನ್ನು ಕೂಡ ಪಿಯುಸಿ ಹಂತದಿಂತ ತರಬೇತಿ ನೀಡುವುದು ಸೂಕ್ತ. ಅದರ ಬಗ್ಗೆ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದರು.
ನಾನು ಗೃಹ ಸಚಿವನಾಗಿದ್ದ ಸಂದರ್ಭದಲ್ಲಿ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಆತ್ಮರಕ್ಷಣೆಗಾಗಿ ಕರಾಟೆ ತರಬೇತಿಯನ್ನು ಹೆಣ್ಣುಮಕ್ಕಳಿಗೆ ನೀಡಬೇಕೆಂದು ತೀರ್ಮಾನಿಸಲಾಗಿತ್ತು. ವಸತಿ ಶಿಕ್ಷಣ ಸಂಸ್ಥೆ ಇದನ್ನು ಅಳವಡಿಸಿಕೊಂಡು ದೊಡ್ಡ ಪ್ರಮಾಣದಲ್ಲಿ ಕಳೆದ ಒಂದು ವರ್ಷದಲ್ಲಿ ತರಬೇತಿ ನೀಡಿರುವುದು ಶ್ಲಾಘನೀಯ ಎಂದರು.
ಗ್ರಾಮೀಣ ಮಹಿಳೆಯರು, ದುಡಿಯುವ ಮಹಿಳೆಯರು, ಶಾಲಾ ಕಾಲೇಜುಗಳ ವಿದ್ಯಾರ್ಥಿನಿಯರು, ಸಹೋದರಿ ಯರಿಗೆ ಈ ವಿದ್ಯೆ ಕಲಿಸಿದರೆ, ದೊಡ್ಡ ಪ್ರಮಾಣದಲ್ಲಿ ಇದನ್ನು ವಿಸ್ತರಿಸಬಹುದು. ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಕಲೆ ತಿಳಿದಿದ್ದರೆ, ಹೆಣ್ಣು ಮಕ್ಕಳಿಗೆ ಹಾಗೂ ಸಮಾಜಕ್ಕೂ ಸುರಕ್ಷತೆ ನೀಡುತ್ತದೆ. ಸುರಕ್ಷಿತ ಸಮಾಜ ನಿರ್ಮಾಣವಾಗಲು ಇದು ಅಗತ್ಯ ಎಂದು ತಿಳಿಸಿದರು. ನಿರ್ಭಯ ಯೋಜನೆಯನ್ನು 700 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಇದನ್ನು ಎಲ್ಲಾ ನಗರಗಳಲ್ಲಿ ವಿಸ್ತರಣೆ ಮಾಡಲು ತೀರ್ಮಾನಿಸಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ತಿಲಿಸಿದರು.

 
                         
                       
                       
                       
                       
                      