ರಾಜ್ಯದಲ್ಲಿ ಒಂದೇ ದಿನ ಇಬ್ಬರು ರೈತರ ಆತ್ಮಹತ್ಯೆ

ಬೆೆಂಗಳೂರು: ರಾಜ್ಯದಲ್ಲಿ ನೂತನ ಜೋಡೆತ್ತಿನ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ದಿನಗಳು ಕಳೆದಿವೆ. ನೂತನ ಸರ್ಕಾರ ಬಂದ ಹೊಸದರಲ್ಲಿಯೇ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೌದು, ಮಂಗಳವಾರ ಒಂದೇ ದಿನ ಸಾಲಬಾಧೆಯನ್ನು ತಾಳಲಾರದೇ ಮೈಸೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ರೈತನನ್ನು ಯಾಲಕ್ಕಿಗೌಡ (62) ಎಂದು ಗುರುತಿಸಲಾಗಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಉಡುವೆಪುರದಲ್ಲಿ ಘಟನೆ ನಡೆದಿದೆ.
ಮೃತ ಯಾಲಕ್ಕಿಗೌಡ ತಮ್ಮ ಜಮೀನಿನಲ್ಲಿ ವಾಣಿಜ್ಯ ಬೆಳೆಗಳಾದ ಹೊಗೆಸೊಪ್ಪು, ಶುಂಠಿ ಬೆಳೆ ಬೆಳೆದಿದ್ದರು. ಆದರೆ, ಬೆಳೆ ನಷ್ಟ ಉಂಟಾಗಿದ್ದರಿಂದ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ, ಸಾಲಬಾಧೆಯನ್ನು ತಾಳಲಾರದೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಣಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಮತ್ತೊಂದೆಡೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕನ್ನೆಳ್ಳಿ ಗ್ರಾಮದಲ್ಲಿ ಘಟನೆ ಸಾಲಬಾಧೆಯಿಂದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತ ರೈತನನ್ನು ಕನ್ನೆಳ್ಳಿ ಗ್ರಾಮದ ಅಮರಣ್ಣ ಕುಂಬಾರ (60) ಎಂದು ಗುರುತಿಸಲಾಗಿದೆ. ಬ್ಯಾಂಕ್ ಹಾಗೂ ಖಾಸಗಿ ಸೇರಿದಂತೆ ಸುಮಾರು 10 ಲಕ್ಷ ರೂ. ಸಾಲ ಮಾಡಿದ್ದ ರೈತ ಅಮರಣ್ಣ, ಸಾಲ ತೀರಿಸಲಾಗದೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.