ಯುಜಿಸಿ ಮಾರ್ಗಸೂಚಿ ಜಾರಿಗೆ ಒತ್ತಾಯಿಸಿ ಎಐಡಿಎಸ್ಓ ಪ್ರತಿಭಟನೆ

ದಾವಣಗೆರೆ: ಯುಜಿಸಿ ಮಾರ್ಗಸೂಚಿಯನ್ನು ಜಾರಿಗೆ ತರುವುದು, ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಓ) ಸಂಘಡನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಗುರುವಾರ ಇಲ್ಲಿನ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ದಾವಣಗೆರೆ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳ 2 ಮತ್ತು 4 ಸೆಮಿಸ್ಟರ್ ಹಾಗೂ ಸ್ನಾತಕೋತ್ತರ 2 ನೇ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸುವುದರ ಬಗ್ಗೆ ಈ ಕೂಡಲೇ ಸುತ್ತೋಲೆ ಹೊರಡಿಸಬೇಕು ಎಂದು ಒತ್ತಾಯಿಸಿದರು.

ವಿಶ್ವವಿದ್ಯಾಲಯವು ರಾಜ್ಯ ಸರ್ಕಾರದ ಮಾರ್ಗಸೂಚಿ ಹಾಗೂ ಯುಜಿಸಿ ಮಾರ್ಗಸೂಚಿಯ ಅನುಸಾರ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಒಂದೇ ಪರೀಕ್ಷೆಯನ್ನು ನಡೆಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಇದೇ ವೇಳೆ ಸಂಘಟನೆಯ ಜಿಲ್ಲಾ ಜಂಟಿ ಕಾರ್ಯದರ್ಶಿ ಕಾವ್ಯ ಮಾತನಾಡಿ, ಬೇರೆ ವಿಶ್ವವಿದ್ಯಾಲಯಗಳು ರಾಜ್ಯ ಸರ್ಕಾರದ ಆದೇಶದ ಅನ್ವಯ ಪ್ರಥಮ ಹಾಗೂ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಒಂದೇ ಪರೀಕ್ಷೆ ನಡೆಸಲು ತೀರ್ಮಾನಿಸಿವೇ ಅದೇ ರೀತಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗು ಒಂದೇ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದ್ದು, ಇದರ ಅನುಸಾರ ದಾವಣಗೆರೆ ವಿಶ್ವವಿದ್ಯಾಲಯ ಕೂಡ ಈ ಕೂಡಲೇ ಅಧಿಸೂಚನೆ ಹೊರಡಿಸಬೇಕೆಂದು ಆಗ್ರಹಿಸಿದರು.

ಕೋವಿಡ್ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯ ಈ ಕೂಡಲೇ ಆದೇಶ ಹೊರಡಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಪ್ರತಿಭಟನೆಯ ನಂತರ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳು ತೆರಳಿ ಕುಲಸಚಿವರಾದ ಗಾಯತ್ರಿ ದೇವರಾಜ್ ಅವರಿಗೆ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ನೀಡಲಾಯಿತು.

ದಾವಣಗೆರೆ ವಿಶ್ವವಿದ್ಯಾಲಯದ ಉಪಕುಲಪತಿಗಳು ಡಾ. ಶರಣಪ್ಪ .ವಿ. ಹಲಸೆಯವರು ದೂರವಾಣಿಯಲ್ಲಿ ರಾಜ್ಯ ಸರ್ಕಾರ ಹಾಗೂ ಯುಜಿಸಿ ಮಾರ್ಗಸೂಚಿಯನ್ನು ಈ ಕೂಡಲೇ ಅನ್ವಯಿಸುತ್ತೇವೆ ಹಾಗೂ ವಿದ್ಯಾರ್ಥಿಪರ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಆಶ್ವಾಸನೆ ನೀಡಿದರು.

ಪ್ರತಿಭಟನೆಯಲ್ಲಿ ಕಾವ್ಯ, ಪುಷ್ಪ ಸೇರಿದಂತೆ‌ ಹಲವು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!