ಯಶಸ್ವಿಗೊಂಡ ಬೃಹತ್ ಲಸಿಕಾಮೇಳ: ಸಂಸದರು, ಮೇಯರ್, ಡಿಸಿ, ಎಸ್ಪಿ ಭಾಗಿ

IMG-20210917-WA0020

ದಾವಣಗೆರೆ: ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಸೂಚನೆಯಂತೆ ದಾವಣಗೆರೆ ನಗರದಲ್ಲಿ ಶುಕ್ರವಾರ ವಿದ್ಯಾನಗರದ ಶಿವ ಪಾರ್ವತಿ ದೇವಸ್ಥಾನದಲ್ಲಿ ಏರ್ಪಡಿಸಿದ ಬೃಹತ್ ಲಸಿಕಾ ಮೇಳದ ಅಂಗವಾಗಿ ನಡೆದ ಲಸಿಕಾಕರಣ ಕಾರ್ಯಕ್ರಮದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಭಾಗವಹಿಸಿ, ಫಲಾನುಭವಿಗಳ ಯೋಗಕ್ಷೇಮ ವಿಚಾರಿಸಿದರು.

ಜಿಲ್ಲೆಯಾದ್ಯಂತ ಶುಕ್ರವಾರದಂದು ಬೃಹತ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದ್ದು, ನಗರದ ಮೋತಿವೀರಪ್ಪ ಕಾಲೇಜು ಹಾಗೂ ಸೂಪರ್ ಮಾರ್ಕೆಟ್ ಕೇಂದ್ರಗಳಲ್ಲಿ ಸಂಸದರೊಂದಿಗೆ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಮುಂತಾದ ಅಧಿಕಾರಿಗಳು ಭೇಟಿ ನೀಡಿ ಲಸಿಕೆ ಮೇಳದಲ್ಲಿ ಪಾಲ್ಗೊಂಡು, ಲಸಿಕೆ ಕಾರ್ಯಕ್ರಮ ವೀಕ್ಷಿಸಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಪ್ರಪಂಚದಲ್ಲೇ ಅತೀ ದೊಡ್ಡ ವ್ಯಾಕ್ಸಿನೇಷನ್ ಮೇಳ ಇದಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಮ್ಮ ಸರ್ಕಾರ ಜನರ ಹಿತಕ್ಕೆ ಬದ್ಧವಾಗಿದೆ ಎಂದರು.

ಜಿಲ್ಲೆಯ ೧೯೫ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಪಟ್ಟಣ ಪಂಚಾಯಿತಿ, ನಗರ ಸಭೆ, ವ್ಯಾಪ್ತಿಯಲ್ಲಿ ೫ ರಿಂದ ೬ ಕಡೆ ಕೋವಿಡ್ ನಿರೋಧಕ ಲಸಿಕೆ ಹಾಕಲಾಗುತ್ತಿದ್ದು, ದಾವಣಗೆರೆ ನಗರದ ಒಟ್ಟು ೫೭ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ನಗರದ ೪೫ ವಾರ್ಡ್ ಹಾಗೂ ಸಿ.ಜಿ. ಆಸ್ಪತ್ರೆಯಲ್ಲಿ ವ್ಯಾಕ್ಸಿನೇಷನ್ ನೀಡುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಕನಿಷ್ಠ ೨೦೦ ರಿಂದ ೫೦೦ ಜನರಿಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದ್ದು,  ಶುಕ್ರವಾರ ಒಂದೇ ದಿನ ಒಟ್ಟು ೦೧ ಲಕ್ಷ ಲಸಿಕೆ ನೀಡುವ ಗುರಿ ಹೊಂದಿದ್ದೇವೆ. ಈಗಾಗಲೇ ೧೦ ಲಕ್ಷದ ೫೨ ಸಾವಿರ ಜನರಿಗೆ ಲಸಿಕೆ ನೀಡಲಾಗಿದ್ದು, ೧೧.೫ ಲಕ್ಷದ ಗುರಿ ಸಾಧಿಸಲು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಶ್ರಮಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಪಾಲಿಕೆಯ ಮಹಾಪೌರ ಎಸ್.ಟಿ.ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದ್ದಜ್ಜಿ, ಡಿಹೆಚ್‌ಒ ಡಾ.ನಾಗರಾಜ್, ಆರ್‌ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!