ಯಶಸ್ವಿನಿ ಯೋಜನೆ ನೋಂದಣಿ ಅವಧಿ ಮಾ.31ರವರೆಗೆ ವಿಸ್ತರಣೆ: ಸೋಮಶೇಖರ್
ಮೈಸೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಫಲಾನುಭವಿಗಳ ಸಮಾವೇಶದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಸಚಿವ ಸೋಮಶೇಖರ್, ಫಲಾನುಭವಿಗಳಿಗೆ ಸರ್ಕಾರದಿಂದ ಬಿಡುಗಡೆ ಆದ ಹಣ ನೂರಕ್ಕೆ ನೂರರಷ್ಟು ತಲುಪಬೇಕು. ಸರ್ಕಾರದ ಎಲ್ಲಾ ಸವಲತ್ತುಗಳು ಸಿಗಬೇಕು. ಯಾರಿಗೂ ತೊಂದರೆ ಆಗಬಾರದೆಂಬ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಪ್ರತಿ ಜಿಲ್ಲೆಯಲ್ಲೂ ಈ ಕಾರ್ಯಕ್ರಮ ಆಯೋಜಿಸಲಾಗುವುದು. ಚಿತ್ರದುರ್ಗ, ತುಮಕೂರು ನಂತರ ಮೈಸೂರಿನಲ್ಲಿ ಮೂರನೇ ಕಾರ್ಯಕ್ರಮ ಇದಾಗಿದೆ. ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುತ್ತಿದ್ದು, ಫಲಾನುಭವಿಗಳ ಬಗ್ಗೆ ಸಿಎಂ ವಿಶೇಷ ಗಮನ ಹರಿಸಿದ್ದಾರೆ. ಜನಸಾಮಾನ್ಯರ ನೋವಿಗೆ, ಕಷ್ಟಕ್ಕೆ ಸ್ಪಂದಿಸುವ ಕಾರ್ಯಕ್ರಮ ಇದಾಗಿದೆ ಎಂದರು.
33ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿದೆ. ಇದರಲ್ಲಿ 3 ಲಕ್ಷ ಹೊಸ ರೈತರಿಗೆ ಸಾಲ ನೀಡಲಾಗುತ್ತಿದೆ. ಸಾಲ ಮಿತಿ ಹೆಚ್ಚಿಸಬೇಕೆಂಬ ಬೇಡಿಕೆಗನುಗುಣವಾಗಿ ಈ ಸಾಲಿನ ಬಜೆಟ್ ನಲ್ಲಿ ಸಾಲ ವಿತರಣೆ ಮೊತ್ತವನ್ನು 3 ಲಕ್ಷ ರೂ. ರಿಂದ 5 ಲಕ್ಷ ರೂ. ಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು. ರಾಜ್ಯಾದ್ಯಂತ ರೈತರಿಗೆ ಹಲವು ಅನುಕೂಲ ಕಲ್ಪಿಸಲಾಗಿದೆ. ಸಾಲಕ್ಕಾಗಿ ಅಲೆದಾಡುವುದನ್ನು ತಪ್ಪಿಸಲು ಒಂದೇ ಬ್ಯಾಂಕ್ ನಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಲಾಗುತ್ತದೆ. ರೈತರ ಆರೋಗ್ಯದ ಹಿತದೃಷ್ಟಿಯಿಂದ ಯಶಸ್ವಿನಿ ಯೋಜನೆಯನ್ನು ಮರುಜಾರಿಗೊಳಿಸಲಾಗಿದೆ. ಯಶಸ್ವಿನಿ ಯೋಜನೆ ನೋಂದಣಿ ಅವಧಿಯನ್ನು ಮಾ.31ರವರೆಗೆ ವಿಸ್ತರಿಸಲಾಗಿದೆ ಎಂದರು.
ರಾಜ್ಯದಲ್ಲಿರುವ 5700ಕ್ಕೂ ಅಧಿಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಒಂದೇ ತಂತ್ರಾಂಶ ಅಳವಡಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮತ್ತಷ್ಟು ಅಧಿಕಾರ ನೀಡಲು ಒಂದೇ ಮಾಡೆಲ್ ಬೈಲಾ ತರಲಾಗುತ್ತಿದೆ. ಇದರಿಂದ ಪೆಟ್ರೋಲ್ ಬಂಕ್, ಕಲ್ಯಾಣ ಮಂಟಪ ಆರಂಭದ ಜೊತೆಗೆ ಹಲವು ರೀತಿಯ ಆರ್ಥಿಕ ಚಟುವಟಿಕೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರುಗಳಾದ ನಾಗೇಂದ್ರ, ರಾಮದಾಸ್, ಹರ್ಷವರ್ಧನ್, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಶಿವಕುಮಾರ್ ಸೇರಿದಂತೆ ನಾನಾ ನಿಗಮ ಮಂಡಳಗಳ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.