ನೈತಿಕ ಪೋಲೀಸ್ ಗಿರಿ ಸಮರ್ಥನೆ: ಸಿಎಂ ತಮ್ಮ ಘನತೆ ಬಗ್ಗೆ ಸ್ವಲ್ಪ ಯೋಚನೆ ಮಾಡಬೇಕಿತ್ತು

ದಾವಣಗೆರೆ: ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿಗಳು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವ ಮುನ್ನ ತಮ್ಮ ಘನತೆ ಬಗ್ಗೆ ಸ್ವಲ್ಪವಾದರೂ ಯೋಚಿಸಬೇಕಿತ್ತು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಗಳ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿರುವ ಅವರು, ಮುಖ್ಯಮಂತ್ರಿಯಾದವರು ಒಬ್ಬ ಸಾಮಾನ್ಯ ಕಾರ್ಯಕರ್ತನಿಗಿಂತ ಕೀಳಾಗಿ ಹೇಳಿಕೆ ನೀಡುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದವಾಗಿದ್ದು, ಅವರು ಯಾವ ಅರ್ಥದಲ್ಲಿ ಆಕ್ಷನ್‌ಗೆ ರಿಯಾಕ್ಷನ್ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ ಎಂಬುದಕ್ಕೆ ಸ್ಪಷ್ಟನೆ ನೀಡಲಿ. ಇಲ್ಲವಾದರೆ ಮುಂದೆ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಸರ್ಕಾರ ನಡೆಸಿದ ತನಿಖಾ ವರದಿಗಳನ್ನೆಲ್ಲ ತನ್ನ ಕಿರುಬೆರಳಿನ ಸಮೀಪ ಇಟ್ಟುಕೊಂಡು ಈಗ ಬೇಜವಾಬ್ದಾರಿ ಹೇಳಿಕೆ ನೀಡಿ ಸಮಾಜದಲ್ಲಿನ ಶಾಂತಿ ಸುವ್ಯವಸ್ಥೆ ಹಾಳಾದರೆ ಅದಕ್ಕೆ ಮುಖ್ಯಮಂತ್ರಿಗಳೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿಯವರು ಅವರಿವರ ಹತ್ಯೆಯಾಗಿದೆ ಎಂದು ಹೇಳಿಕೊಂಡು ಪ್ರತಿಕಾರ ತೀರಿಸಿಕೊಳ್ಳಲು ಮುಖ್ಯಮಂತ್ರಿ ಪದವಿಯನ್ನು ಅಲಂಕರಿಸಿದಂತೆ ಕಾಣುತ್ತಿದೆ. ಇವರ ಹೇಳಿಕೆಯಿಂದಾಗಿ ರಾಜ್ಯದಲ್ಲಿ ಕೋಮುವಾದಿ ಸಂಘಟನೆಗಳಿಂದ ರಾಜ್ಯದಲ್ಲಿ ಅನೈತಿಕ ಪೊಲೀಸ್ ಗಿರಿ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ. ಇದಕ್ಕೆಲ್ಲಾ ನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿಗಳೇ ಕಾರಣೀಕರ್ತರಾಗುತ್ತಾರೆ ಎಂದು ಎಚ್ಚರಿಸಿದ್ದಾರೆ.

ಈಗಿನ ಸರ್ಕಾರ ಹಾಗೂ ಆಡಳಿತ ಪಕ್ಷದ ನಾಯಕರ ಹೇಳಿಕೆಗಳನ್ನು ಗಮನಿಸಿದರೆ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲೆಂದೇ ಅಧಿಕಾರ ಹಿಡಿದವರಂತೆ ಕಾಣುತ್ತಿದೆ. ಈ ಮನಸ್ಥಿತಿಯನ್ನು ಬದಲಾಯಿಸಿಕೊಂಡು ತಕ್ಷಣ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಿಮ್ಮ ಹೇಳಿಕೆಯ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!