ಝೀಕಾ ವೈರಸ್ ಭೀತಿ ಹಿನ್ನೆಲೆ ಲಾರ್ವಾ ಸಮೀಕ್ಷೆಗೆ ಸೂಚಿಸಿದ ಡಿಸಿ

IMG-20210716-WA0008

 

ದಾವಣಗೆರೆ ಜು.16: ನೆರೆಯ ರಾಜ್ಯ ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಝೀಕಾ ವೈರಸ್ ‘ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೊಳ್ಳೆಗಳ ಲಾರ್ವಾ ಪತ್ತೆಹಚ್ಚುವ ಸಮಿಕ್ಷೆ ಕಾರ್ಯ ಕೈಗೊಳ್ಳಲು ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಝೀಕಾ ವೈರಸ್ ಹರಡುವುದನ್ನು ತಪ್ಪಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೆರೆಯ ಕೇರಳ ರಾಜ್ಯದಲ್ಲಿ ಝೀಕಾ ವೈರಸ್ ಸಾಂಕ್ರಾಮಿಕ ರೋಗವ್ಯಾಪಕವಾಗಿ ಹರಡುತ್ತಿದ್ದು, ಆರೋಗ್ಯ ಇಲಾಖೆಯ ಸೂಚನೆಯಂತೆ, ಜಿಲ್ಲೆಯಲ್ಲಿ ಈ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದು ‘ಈಡಿಸ್ ಈಜಿಪ್ಟೆöÊ’ ಎನ್ನುವ ಹಗಲು ಹೊತ್ತಿನಲ್ಲಿ ಕಚ್ಚುವ ಸೊಳ್ಳೆಯಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಇದಕ್ಕೆ ಯಾವುದೇ ಲಸಿಕೆ ಇಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳುವುದೇ ಇದರ ನಿಯಂತ್ರಣಕ್ಕೆ ಇರುವ ದಾರಿ. ಹೀಗಾಗಿ ಆರೋಗ್ಯ ಇಲಾಖೆಯು ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಈಡಿಸ್ ಜಾತಿಯ ಸೊಳ್ಳೆಗಳು ಅಭಿವೃದ್ಧಿಯಾಗದಂತೆ ಲಾರ್ವಾ ಸಮೀಕ್ಷೆಯನ್ನು ಕೈಗೊಂಡು, ಸೊಳ್ಳೆಗಳ ಲಾರ್ವಾ ಪತ್ತೆಯಾದಲ್ಲಿ, ಕೂಡಲೆ ನಾಶಕ್ಕೆ ಕ್ರಮ ಕೈಗೊಳ್ಳುವುದರ ಜೊತೆಗೆ ಅಂತಹ ಪ್ರದೇಶಗಳಲ್ಲಿ ತೀವ್ರ ನಿಗಾ ಇರಿಸಬೇಕು. ಘನ ತ್ಯಾಜ್ಯ ವಸ್ತುಗಳನ್ನು ಮಹಾನಗರಪಾಲಿಕೆಯೂ ಸೇರಿದಂತೆ ಆಯಾ ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಜಿಲ್ಲೆಯಲ್ಲಿ ಇಂತಹ ಪ್ರಕರಣ ಪತ್ತೆಹಚ್ಚಲು ಮುನ್ನೆಚ್ಚರಿಕೆಯಾಗಿ ರೋಗ ಸಮೀಕ್ಷೆ ಬಲಪಡಿಸುವುದರ ಜೊತೆಗೆ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯ ನಿರ್ವಹಿಸಬೇಕು. ರೋಗ ಲಕ್ಷಣ ಪ್ರಕರಣ ಪತ್ತೆಯಾದಲ್ಲಿ, ಅದರ ಸೀರಂ ಮಾದರಿಯನ್ನು ಝೀಕಾ ವೈರಸ್ ಮತ್ತು ಡೆಂಗ್ಯೂ ಪರೀಕ್ಷೆಗಾಗಿ ಜಿಲ್ಲಾ ಸರ್ವೇಕ್ಷಣಾ ಘಟಕ, ಡಿಪಿಹೆಚ್‌ಎಲ್ ಪ್ರಯೋಗ ಶಾಲೆಗೆ ಸೂಕ್ತ ವಿವರಣೆಗಳೊಂದಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಡಿಹೆಚ್‌ಒ ಡಾ. ನಾಗರಾಜ್ ಅವರು ಝೀಕಾ ವೈರಸ್ ಕುರಿತು ಮಾಹಿತಿ ನೀಡಿ, ಸೊಳ್ಳೆ ಕಚ್ಚುವಿಕೆಯಿಂದ ಪಾರಾಗುವುದೇ ಇದರ ತಡೆಗೆ ಸೂಕ್ತ ವಿಧಾನವಾಗಿದೆ. ಆರೋಗ್ಯ ಇಲಾಖೆಯು ಜಿಲ್ಲೆಯಲ್ಲಿ ಈಗಾಗಲೆ ಈಡೀಸ್ ಜಾತಿ ಸೊಳ್ಳೆಗಳು ಅಭಿವೃದ್ಧಿಯಾಗದಂತೆ ಲಾರ್ವಾ ಸಮೀಕ್ಷೆಯನ್ನು ನಿರಂತರವಾಗಿ ನಡೆಸುತ್ತಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್, ಕೋವಿಡ್ ನೋಡಲ್ ಅಧಿಕಾರಿ ಪ್ರವೀಣ್ ನಾಯಕ್, ಡಿಹೆಚ್‌ಒ ಡಾ. ನಾಗರಾಜ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ, ಸರ್ವೆಲೆನ್ಸ್ ಮೆಡಿಕಲ್ ಅಧಿಕಾರಿ ಡಾ. ಶ್ರೀಧರ್, ಡಾ. ನಟರಾಜ್, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ ಜಿಲ್ಲೆಯ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರುಗಳು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಡೆಂಗ್ಯು ವಿರೋಧಿ ಮಾಸಾಚರಣೆ ಅಂಗವಾಗಿ ಸಾರ್ವಜನಿಕ ಜಾಗೃತಿಗಾಗಿ ವಿವಿಧ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು.

Leave a Reply

Your email address will not be published. Required fields are marked *

error: Content is protected !!